ವಿಜಯಪುರ: ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸುವಂತೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಜ್ವಲ್‌ಕುಮಾರ ಘೋಷ್

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಅಧಿಕಾರಿಗಳು ಇಲಾಖಾ ಸಮನ್ವಯದೊಂದಿಗೆ ಒಂದು ತಂಡವಾಗಿ ಕಾರ್ಯನಿರ್ವಹಿಸುವ ಮೂಲಕ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ನಿಗದಿತ ಅವಧಿಯಲ್ಲಿ ಅರ್ಹರಿಗೆ ಸೌಲಭ್ಯ ದೊರಕಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು.ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗುವ ಮೂಲಕ ಕರ್ತವ್ಯದಲ್ಲಿ ನಿಷ್ಠುರತೆ ಮೆರೆಯುವ ಮೂಲಕ ಇತರೆ ಸಿಬ್ಬಂದಿಗಳಿಗೆ ಪ್ರೇರಣೆ ದೊರೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಪ್ರತಿ 20 ದಿನಗಳಿಗೊಮ್ಮೆ ಜಿಲ್ಲೆಗೆ ಆಗಮಿಸಿ ನಿರಂತರ ಸಭೆ ನಡೆಸಿ ಸೂಚನೆ ನೀಡುವುದಾಗಿ ತಿಳಿಸಿದ ಅವರು ಆಡಳಿತ ಕಾರ್ಯವೈಖರಿ ಚುರುಕುಗೊಳಿಸುವಂತೆ ಅವರು ಸೂಚನೆ ನೀಡಿದರು.
ಇದನ್ನೂ ಓದಿ:ಮಮದಾಪುರ ಕೆರೆ: ಸಿದ್ದೇಶ್ವರ ಶ್ರೀಗಳಿಗೆ ಅರ್ಪಣೆ
ಜಿಲ್ಲೆಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಪರೀಕ್ಷಿಸಿದ ನಂತರ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ಬಯೋಲಾಜಿಕಲ್ ಮತ್ತು ಕೆಮಿಕಲ್ ಪರೀಕ್ಷೆಯನ್ನು ನಿಯಮಿತವಾಗಿ ಕೈಗೊಂಡು ನಿರಂತರ ಪರಿಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಕಾಲಕಾಲಕ್ಕೆ ಟಾಸ್ಕಪೋಸ್ ಸಭೆಗಳನ್ನು ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಯಾವುದೇ ಹಾನಿಯಾಗದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿರಂತರವಾಗಿ ಫಾಗಿಂಗ್ ಕೈಗೊಳ್ಳಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಡೆಂಗ್ಯೂ ನಿಯಂತ್ರಣ ಕುರಿತು ಅರಿವು ಮೂಡಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ನಗರ ಸ್ಥಳೀಯ ಸಂಸ್ಥೆಗಳು ಒಳಗೊಂಡಂತೆ ಜಿಲ್ಲೆಯ ಎಲ್ಲಾ ಇಲಾಖೆಗಳು ಇ-ಆಫೀಸ್ ಅಳವಡಿಸಿಕೊಂಡು ಕಾರ್ಯನಿರ್ವಹಿಸಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಗ್ಯಾರಂಟಿ ಯೋಜನೆಗಳ ಪ್ರಗತಿ ಮಾಹಿತಿ ಪಡೆದುಕೊಂಡರು.
ಇದನ್ನೂ ಓದಿ:ವಿಜಯಪುರ: ಐತಿಹಾಸಿಕ ತಾಜ್‌ಬಾವಡಿ ಸ್ಮಾರಕ ಸಂರಕ್ಷಣೆ
ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಕೃಷ್ಣಾ, ಭೀಮಾ ಮತ್ತು ಡೋಣಿ ನದಿಯ ಪಾತ್ರದಲ್ಲಿರುವ ಒಟ್ಟು 11 ತಾಲೂಕುಗಳ 38 ಗ್ರಾಮ ಪಂಚಾಯತಿಗಳಲ್ಲಿರುವ ಒಟ್ಟು 76 ಗ್ರಾಮಗಳಲ್ಲಿ ಗ್ರಾಮ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದೆ. ರಕ್ಷಣಾ ಸಾಮಗ್ರಿಗಳಾದ ಬೋಟ್, ರೋಪ್ಸ್, ಲೈಫ್ ಜಾಕೆಟ್, ಲೈಫ್ ಬಾಯ್, ಟಾರ್ಚ್ ಹಾಗೂ ಚೈನ್ ಸಾ ಇತ್ಯಾದಿ ಸಾಮಗ್ರಿಗಳನ್ನು ತಾಲೂಕಾ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತವಾಗಿಟ್ಟುಕೊಳ್ಳಲಾಗಿದೆ ಎಂದು ಹೇಳಿದರು.
ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಪ್ರತಿ ತಾಲೂಕಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮತ್ತು ನದಿ ಪಾತ್ರದ ಗ್ರಾಮ ಪಂಚಾಯತಿಗಳಿಗೆ ಓರ್ವರಂತೆ ತಾಲೂಕಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ. ನೆರೆಯ ಮಹಾರಾಷ್ಟ ರಾಜ್ಯದ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ವ್ಯಾಟ್ಸಪ್ ಮೂಲಕ ನಿರಂತರ ಸಂಪರ್ಕ ಸಾಧಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಟೋಲ್ ಫ್ರಿ ಸಂಖ್ಯೆ 1077 ಪ್ರಾರಂಭಿಸಿ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಸಿಡಿಲಿನಿಂದ ಹಾಗೂ ಪ್ರವಾಹದಿಂದ ರಕ್ಷಿಸಿಕೊಳ್ಳಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಕಲುಷಿತ ನೀರು ಹಾಗೂ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ತಿಳುವಳಿಕೆ ಮೂಡಿಸಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಉಲ್ಲಾಸ ನವ್‌ಭಾರತ ಸಾಕ್ಷರತಾ ಕಾರ್ಯಕ್ರಮದಡಿಯಲ್ಲಿ ದಿನಾಂಕ:24-3-2024ರಂದು ಆಯೋಜಿಸಲಾದ ಬುನಾದಿ ಸಾಕ್ಷರತೆ ಮತ್ತು ಲೆಕ್ಕಾಚಾರದ ಮೌಲ್ಯಮಾಪನಾ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳು ವಿತರಿಸಿದರು. 2024-25ನೇ ಸಾಲಿನ ಜಿಲ್ಲಾ ಪಂಚಾಯತಿ ಕಾರ್ಯಕ್ರಮಗಳ ವಾರ್ಷಿಕ ಕ್ರಿಯಾಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಇಂಡಿ ಉಪ ವಿಭಾಗಾಧಿಕಾರಿ ಆಬೀದ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ ಹುಬ್ಬಲ್ಳಿ, ಜಿಲ್ಲಾ ಶಸ್ತç ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.






