ವಿಜಯಪುರ: ನಗರದ ಪ್ರಮುಖ ರಾಜಕಾಲುವೆಗಳು, Rajakaluve Cleaning ಒಳಚರಂಡಿಗಳು ಹಾಗೂ ಮಳೆ ನೀರು ಹರಿವಿನ ಮಾರ್ಗಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರ ವ್ಯಾಪ್ತಿಯಲ್ಲಿ ಮುಂಗಾರು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಪಾಲಿಕೆಯ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ನೀರು ನಿಲ್ಲುವ ಪ್ರದೇಶಗಳಲ್ಲಿ ಅಗತ್ಯ ಪಂಪ್ ಸೆಟ್ಗಳನ್ನು ಸಿದ್ಧವಾಗಿಡಬೇಕು ಎಂದು ತಿಳಿಸಿದರು.
ತುರ್ತು ದುರಸ್ತಿ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
Rajakaluve Cleaning ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ವಿದ್ಯುತ್ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತುರ್ತು ಪರಿಸ್ಥಿತಿಗಳಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು. ಸಾರ್ವಜನಿಕರು ಮಳೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು. ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ 08352-222474 ಗೆ ಸಂಪರ್ಕಿಸಲು ಮೇಯರ್ ಮನವಿ ಮಾಡಿದರು.
ಸಭೆಯಲ್ಲಿ ಜಲಾವೃತ ಪ್ರದೇಶಗಳು, ಮಳೆ ನೀರಿನ ಹರಿವು, ಚರಂಡಿ ಸ್ವಚ್ಛತೆ, ರಸ್ತೆ ಹಾನಿ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಸಮಗ್ರ ಚರ್ಚೆ ನಡೆಯಿತು. ಸಭೆಯಲ್ಲಿ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.






