Banajiga 2A Reservation ವಿಚಾರ ಮತ್ತೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಬಂದಿದೆ. ವಿಜಯಪುರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಬಣಜಿಗ ಸಮಾಜವನ್ನು ಕೂಡಲೇ 2ಎ ಮೀಸಲಾತಿ ವ್ಯಾಪ್ತಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
Banajiga 2A Reservation ಕುರಿತು ಬಿಜೆಪಿ ಜಿಲ್ಲಾಧ್ಯಕ್ಷರ ಆಗ್ರಹ
ರಾಜ್ಯ ಸರ್ಕಾರವು ಬಣಜಿಗ ಸಮಾಜಕ್ಕೆ ಮತ್ತೊಮ್ಮೆ ಅನ್ಯಾಯ ಮಾಡಬಾರದು. ಹೈಕೋರ್ಟ್ ಆದೇಶದಂತೆ ಕೂಡಲೇ 2ಎ ಮೀಸಲಾತಿ ಜಾರಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಅವರು ಮಾತನಾಡಿ, 1994ರ ಮೊದಲು ಬಣಜಿಗ ಸಮಾಜವು 2ಎ ಮೀಸಲಾತಿ ವ್ಯಾಪ್ತಿಯಲ್ಲಿತ್ತು. ಬಳಿಕ ಕಾಂಗ್ರೆಸ್ ಸರ್ಕಾರ 3ಎ ವರ್ಗಕ್ಕೆ ಸೇರಿಸಿ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು. ಸುಮಾರು 18 ವರ್ಷಗಳ ಕಾನೂನು ಹೋರಾಟದ ಬಳಿಕ ನ್ಯಾಯಾಲಯದಿಂದ ಅನುಕೂಲಕರ ಆದೇಶ ಬಂದಿದೆ ಎಂದು ಹೇಳಿದರು. ಸರ್ಕಾರ ನ್ಯಾಯಾಲಯದ ಆದೇಶವನ್ನು ಗೌರವಿಸಿ ಶಿಕ್ಷಣ ಮಾತ್ರವಲ್ಲದೆ ಎಲ್ಲ ಕ್ಷೇತ್ರಗಳಲ್ಲಿಯೂ 2ಎ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಿಂದ ಹಲವು ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಪಂಚಮಸಾಲಿ ಹಾಗೂ ಬಣಜಿಗ ಸಮಾಜದ ಮೀಸಲಾತಿ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿರುವ ಬಣಜಿಗ ನಾಯಕರು ಮುಖ್ಯಮಂತ್ರಿ ಅವರನ್ನು ಮನವೊಲಿಸಿ ಸಮಾಜಕ್ಕೆ ಪೂರ್ಣ ಪ್ರಮಾಣದ 2ಎ ಮೀಸಲಾತಿ ಕಲ್ಪಿಸಬೇಕು. ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಮಾಜದ ಮುಖಂಡ ಬಸವರಾಜ ಮಂಟೂರ ಮಾತನಾಡಿ, ಸರ್ಕಾರದ ಆದೇಶವಿದ್ದರೂ ತಹಶೀಲ್ದಾರರು ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ ಮಾಡುತ್ತಿದ್ದಾರೆ. ಈ ಕುರಿತು ಸರ್ಕಾರ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜಗದೀಶ ಪಚ್ಚಾಪೂರ, ಪ್ರಭು ಅಂಗಡಿ, ಪ್ರಕಾಶ ವಾಣಿ, ಬಸವರಾಜ ಬೆಳ್ಳುಬ್ಬಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.






