ವಿಜಯಪುರ: ಕನ್ನಡ ನಾಮ ಫಲಕ ಜಿಲ್ಲಾಡಳಿತದಿಂದ ಇದೇ ನವೆಂಬರ್ 1ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯೊಂದಿಗೆ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.
ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು, ವಿವಿಧ ಕನ್ನಡ ಪರ ಸಂಘಟನೆಗಳು, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು.
ಇದನ್ನೂ ಓದಿ: Vijayapura News | ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೈರಹಾಜರಾಗುವ ಅಧಿಕಾರಿಗಳೆ ಎಚ್ಚರ
ಕನ್ನಡ ನಾಮ ಫಲಕ ಬಳಕೆಗೆ ಕಟ್ಟುನಿಟ್ಟಿನ ಸೂಚನೆ: ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಆದೇಶದಂತೆ ನಾಮಫಲಕಗಳು ಶೇ.60 ರಷ್ಟು ಕನ್ನಡ ಭಾಷೆ ಒಳಗೊಂಡಿರಬೇಕು. ಶೇ.40 ರಷ್ಟು ಉಳಿದ ಭಾಷೆಗಳನ್ನು ಬಳಸಲು ಅವಕಾಶವಿದ್ದು, ಇದೇ ಅಕ್ಟೋಬರ್ 30ರೊಳಗೆ ಜಿಲ್ಲೆಯ ಎಲ್ಲ ನಾಮಫಲಕಗಳು ಕನ್ನಡ ಭಾಷೆಯನ್ನು ಒಳಗೊಂಡಿರಬೇಕು. ಅಕ್ಟೋಬರ್ 31ರ ನಂತರ ಕನ್ನಡ ಭಾಷೆ ಒಳಗೊಳ್ಳದ ನಾಮಫಲಕಗಳನ್ನು ಮುಟ್ಟುಗೊಲು ಹಾಕಿ, ಸಂಬಂಧಿಸಿದ ಅಂಗಡಿ, ಸಂಸ್ಥೆಗಳ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಕನ್ನಡ ನಾಮಫಲಕ ಅಳವಡಿಕೆಗೆ ಜಾಗೃತಿ: ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಸೇರಿದಂತೆ ಖಾಸಗಿ ಕಚೇರಿ, ಶಾಲೆ, ಆಸ್ಪತ್ರೆ ಅಂಗಡಿ ಮುಂಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಪಲಕ ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳೊಂದಿಗೆ ಇದೇ ಅಕ್ಟೋಬರ್ 20 ರಂದು ಜಾಗೃತಿ ಹಮ್ಮಿಕೊಳ್ಳಲಾಗುವುದು. ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಸೋಲಾಪುರ ರಸ್ತೆಯಲ್ಲಿರುವ ಬಂಜಾರಾ ಕ್ರಾಸ್‍ದಿಂದ ಆರಂಭಗೊಳಿಸಿ, ನಗರದ ವಿವಿಧೆಡೆ ಇರುವ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳ ಕುರಿತು ಜಾಗೃತಿ ಮೂಡಿಸಲು ನಿರ್ಧರಿಸಲಾಯಿತು.
ಇದನ್ನೂ ಓದಿ: Bagalkote News | ಪಟಾಕಿಗಳ ಮಾರಾಟ ಮತ್ತು ಬಳಕೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿ : ಡಿ.ಸಿ.ಜಾನಕಿ
ರಾಜ್ಯೋತ್ಸವ ಕಾರ್ಯಕ್ರಮ ಪೂರ್ವಸಿದ್ಧತೆ: ನವೆಂಬರ್ 1 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ತಾಯಿ ಭುವನೇಶ್ವರ ಮೆರವಣಿಗೆ ಕಾರ್ಯಕ್ರಮದ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ರಸ್ತೆ, ವೃತ್ತಗಳ ಸ್ವಚ್ಛತೆ, ದೀಪಾಂಲಕಾರ ವ್ಯವಸ್ಥೆ, ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ, ಆಸನಗಳ ವ್ಯವಸ್ಥೆ, ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ಸನ್ಮಾನ, ಧ್ವನಿವರ್ಧಕ, ಸೌಂಡ್‍ಸಿಸ್ಟಮ್ ವ್ಯವಸ್ಥೆ, ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ, ರಾಜ್ಯೋತ್ಸವ ಅಂಗವಾಗಿ ವಿವಿಧ ಇಲಾಖೆಗಳಿಂದ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನೊಳಗೊಂಡ ಸ್ತಬ್ಧಚಿತ್ರ ನಿರ್ಮಾಣ ಹಾಗೂ ವಿವಿಧ ಸರ್ಕಾರಿ ಕಚೇರಿಗಳನ್ನು ದೀಪಾಲಂಕಾರಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಕಾಯಕ್ರಮದ ಆಮಂತ್ರಣ ಪತ್ರಿಕೆ, ಶಿಷ್ಠಾಚಾರದಂತೆ ಜನಪ್ರತಿನಿಧಿಗಳಿಗೆ ಆಹ್ವಾನ, ವ್ಯವಸ್ಥಿತವಾಗಿ ನಾಡಗೀತೆ, ಸಾಮೂಹಿಕ ಕವಾಯತು, ಪಥಸಂಚಲನ, ಎನ್‍ಸಿಸಿ,ಎನ್‍ಎಸ್‍ಎಸ್, ಸ್ಕೌಟ್ಸ್ ಆಂಡ್ ಗೈಡ್ಸ್, ವಿವಿಧ ಶಾಲೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರಿಗೆ ವ್ಯವಸ್ಥೆ, ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಅಲ್ಪೋಪಹಾರ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆ, ಸಂಜೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆ ಸಿದ್ಧತೆ ಮಾಡಿಕೊಳ್ಳುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರಾದ ಫಯಾಜ ಕಲಾದಗಿ, ಸೋಮನಗೌಡ ಕಲ್ಲೂರ, ದೇವೇಂದ್ರ ಮಿರೇಕರ, ಭೀಮರಾಯ ಜಿಗಜಿಣಗಿ, ರಮೇಶ ಕುಲಕರ್ಣಿ, ದಯಾನಂದ ಸಾವಳಗಿ, ದಸ್ತಗೀರ ಸಾಲೋಟಗಿ ಸೇರಿದಂತೆ ವಿವಿಧ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದು, ವಿವಿಧ ಸಲಹೆಗಳನ್ನು ನೀಡಿದರು.


















