ಜಲಾಶಯಗಳ ನೀರು ಸಮರ್ಪಕ ನಿರ್ವಹಣೆಗೆ ಸಚಿವ ಎಂ.ಬಿ. ಪಾಟೀಲ ಸೂಚನೆ: ಕುಡಿಯುವ ನೀರಿಗೆ ಮೊದಲ ಆದ್ಯತೆ
ವಿಜಯಪುರ: ಜಿಲ್ಲೆಯಲ್ಲಿ ಲಭ್ಯವಿರುವ ಜಲಾಶಯಗಳ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಸಮಾನವಾಗಿ ನೀರು ಪೂರೈಸುವುದರ ಜೊತೆಗೆ ಕೊನೆಯ ಅಂಚಿನ ಪ್ರದೇಶಗಳಿಗೂ ನಿಗದಿತ ಪ್ರಮಾಣದಲ್ಲಿ ನೀರು ತಲುಪಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆ ಕೊರತೆಯಿಂದಾಗಿ ನೀರಿನ ಲಭ್ಯತೆ ಕಡಿಮೆಯಾಗಿದೆ. ಆಲಮಟ್ಟಿ ಜಲಾಶಯದಲ್ಲಿಯೂ ನೀರಿನ ಸಂಗ್ರಹ ಕಡಿಮೆಯಿದ್ದು, ಮುಂದಿನ ದಿನಗಳಲ್ಲಿ ಸಮರ್ಪಕ ಮಳೆಯಾಗದಿದ್ದರೆ ನೀರಿನ ನಿರ್ವಹಣೆ ಸವಾಲಾಗಲಿದೆ. ಈ ಹಿನ್ನೆಲೆಯಲ್ಲಿ ನೀರಾವರಿ ಸಚಿವರು, ಈ ಭಾಗದ ಶಾಸಕರು, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಅವಧಿಗೆ ನೀರಿನ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Vijayapura Drinking Water: ಕುಡಿಯುವ ನೀರಿಗೆ ಎರಡು ಟಿಎಂಸಿ ನೀರಿನ ಬಳಕೆ
ಜಿಲ್ಲೆಗೆ ಕುಡಿಯುವ ನೀರಿಗಾಗಿ ನಿಗದಿಪಡಿಸಿರುವ ಎರಡು ಟಿಎಂಸಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಇಂಡಿ ಹಾಗೂ ನಾಗಠಾಣ ವಿಧಾನಸಭಾ ಕ್ಷೇತ್ರಗಳ ಕೆಲವು ಪ್ರದೇಶಗಳಿಗೆ ನೀರು ತಲುಪಿಸುವ ಬಗ್ಗೆ ವಿಶೇಷ ಗಮನಹರಿಸಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ ಯಾವುದೇ ತೊಂದರೆಯಾಗದಂತೆ ನೀರು ಪೂರೈಸಬೇಕು. ಕೆರೆ ತುಂಬಿಸುವ ಯೋಜನೆಗಳನ್ನು ನಿಗದಿತ ನೀರಿನ ಹಂಚಿಕೆಯಂತೆ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಲಧಾರೆ ಯೋಜನೆಗೆ ಎದುರಾದ ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ಸಭೆ
ಜಲಧಾರೆ ಯೋಜನೆಯು ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಮಹತ್ವದ ಯೋಜನೆಯಾಗಿದೆ. ಯೋಜನೆಯ ಅನುಷ್ಠಾನದಲ್ಲಿ ಅರಣ್ಯ ಇಲಾಖೆಯ ಮೀಸಲು ಅರಣ್ಯ ಪ್ರದೇಶದಲ್ಲಿ ಪೈಪ್ಲೈನ್ ಅಳವಡಿಕೆ ಸೇರಿದಂತೆ ಎದುರಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಅರಣ್ಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು.
ಮುಂಬರುವ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿಯೇ ಈ ಸಭೆ ನಡೆಸಿ ಜಲಧಾರೆ ಯೋಜನೆಗೆ ವೇಗ ನೀಡಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದರು.
ಅರಣ್ಯ ಇಲಾಖೆಯಿಂದ ಪೈಪ್ಲೈನ್ಗಳಿಗೆ ಹಾನಿಯಾಗದಂತೆ ಹಾಗೂ ಫೆನ್ಸಿಂಗ್ ಕಾರ್ಯದಿಂದ ಕುಡಿಯುವ ನೀರಿನ ಪೂರೈಕೆಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಬರ ನಿರ್ವಹಣೆ: ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಕ್ರಮ
ವಿಜಯಪುರ ನಗರದ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಬಾವಡಿಗಳನ್ನು ಸ್ವಚ್ಛಗೊಳಿಸಲಾಗಿದ್ದು, ಅವುಗಳನ್ನು ಸಾರ್ವಜನಿಕರ ಬಳಕೆಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮ ಪಂಚಾಯಿತಿವಾರು ಮೇವಿನ ಲಭ್ಯತೆ ಹಾಗೂ ಕೊರತೆಯ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಮೇವು ಬೇರೆ ರಾಜ್ಯಗಳಿಗೆ ಸಾಗಣೆಯಾಗದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಅಗತ್ಯವಿರುವ ಕಡೆ ಮೇವಿನ ಬೀಜ ವಿತರಿಸಿ ಮೇವು ಬೆಳೆಯಲು ರೈತರನ್ನು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಬೆಳೆ ವಿಮೆ ಯೋಜನೆಯಲ್ಲಿ ರೈತರಿಗೆ ಯಾವುದೇ ಅನ್ಯಾಯವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ವಿಮೆ ಹೆಸರಿನಲ್ಲಿ ನಡೆಯುವ ವಂಚನೆಗಳನ್ನು ತಡೆಯುವುದರ ಜೊತೆಗೆ ರೈತರಿಗೆ ಜಾಗೃತಿ ಮೂಡಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಯೋಜನೆಯ ಪ್ರಯೋಜನ ನೇರವಾಗಿ ರೈತರಿಗೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.
ಕೊನೆಯ ಅಂಚಿನ ಪ್ರದೇಶಗಳಿಗೂ ನೀರು ತಲುಪಿಸಲು ಶಾಸಕರ ಒತ್ತಾಯ
ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಅರಣ್ಯ ಇಲಾಖೆಯ ಕಾರ್ಯಗಳಿಂದ ಕುಡಿಯುವ ನೀರಿನ ಪೂರೈಕೆಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ನಗರ ಪ್ರದೇಶಗಳಲ್ಲಿನ ನೀರು ಪೂರೈಕೆ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಬೇಕು. ಜಲಧಾರೆ ಯೋಜನೆ ನಿಗದಿತ ಅವಧಿಯಲ್ಲಿ ಪೂರ್ಣಗೊಂಡರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.
ಜಿಲ್ಲಾಸ್ಪತ್ರೆ ಆವರಣದ ಗಿಡಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ನೀರಿನ ಆಪರೇಟರ್ ನೇಮಿಸಿ ಸಮರ್ಪಕ ನಿರ್ವಹಣೆ ಮಾಡಬೇಕು. ನಗರದ ಒಳಚರಂಡಿ ವ್ಯವಸ್ಥೆಯನ್ನೂ ಸಮರ್ಪಕವಾಗಿ ನಿರ್ವಹಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಲಭ್ಯವಿರುವ ನೀರನ್ನು ವ್ಯರ್ಥವಾಗದಂತೆ ಬಳಸಿಕೊಳ್ಳಬೇಕು. ಎಲ್ಲರಿಗೂ ಸಮಾನವಾಗಿ ಹಾಗೂ ಕೊನೆಯ ಅಂಚಿನ ಪ್ರದೇಶಗಳಿಗೂ ನೀರು ತಲುಪಿಸಬೇಕು. ಇಂಡಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕೆ ಆದ್ಯತೆ ನೀಡಬೇಕು. ಇಂಡಿ ಪಟ್ಟಣಕ್ಕೆ ಪರ್ಯಾಯ ವ್ಯವಸ್ಥೆಯ ಮೂಲಕವೂ ನೀರು ಪೂರೈಸಲು ಯೋಜನೆ ರೂಪಿಸಬೇಕು ಎಂದರು.
ಶಾಸಕ ಸಿ.ಎಸ್. ನಾಡಗೌಡ ಮಾತನಾಡಿ, ಕೆರೆ ತುಂಬಿಸುವ ಸಂದರ್ಭದಲ್ಲಿ ಅಧಿಕಾರಿಗಳು ವಿಶೇಷ ನಿಗಾ ವಹಿಸಬೇಕು. ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಕೆರೆಗಳಿಗೆ ನೀರು ಹರಿಸಬೇಕು. ನಾರಾಯಣಪುರ ಜಲಾಶಯ ಆಧಾರಿತ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಸಮರ್ಪಕವಾಗಿ ನೀರು ಪೂರೈಸಲು ಕ್ರಮವಹಿಸಬೇಕು ಎಂದು ಹೇಳಿದರು.
ಸಿಂದಗಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಐಸಿಸಿ ಸಭೆಯಲ್ಲಿ ನಿಗದಿಪಡಿಸಿದಂತೆ ಕೆರೆ ತುಂಬಿಸುವ ಯೋಜನೆಗಳಿಗೆ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ನಿಗದಿತ ಪ್ರಮಾಣದ ನೀರು ಸದ್ಬಳಕೆಯಾಗುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ಕೆಡಿಪಿ ಸಭೆಯಲ್ಲಿ ನೀರು ಮತ್ತು ಬರ ನಿರ್ವಹಣೆ ಕುರಿತು ಚರ್ಚೆ
ಸಭೆಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಲಭ್ಯತೆ, ಕೆರೆ ತುಂಬಿಸುವ ಯೋಜನೆಗಳ ಪ್ರಗತಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ, ಜಲಧಾರೆ ಯೋಜನೆಯ ತಾಂತ್ರಿಕ ಸಮಸ್ಯೆಗಳು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಸಮಗ್ರ ಚರ್ಚೆ ನಡೆಯಿತು. ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಸಿದ್ದಾಮಪ್ಪ ಹೊನಮೋಡೆ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಶಿವಣ್ಣ ಪಿ. ಕೋಟಾರಗಸ್ತಿ, ನೂರಅಹ್ಮದ ಅತ್ತಾರ, ಸತೀಶಕುಮಾರ ಅಡವಿ ಹಾಗೂ ಪ್ರಿಯಾಂಕ ಚೇತನ ತೊರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






