ಭೂಮಿ ಕಳೆದುಕೊಂಡ ರೈತ ಕುಟುಂಬಗಳ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ; ಕೃಷಿ, ಹೈನುಗಾರಿಕೆ ಮತ್ತು ಆಹಾರ ಸಂಸ್ಕರಣಾ ಕ್ಷೇತ್ರಗಳಿಗೂ ಉತ್ತೇಜನ: ಸಚಿವ ಎಂ.ಬಿ. ಪಾಟೀಲ
ವಿಜಯಪುರ, ನ.16: ಉತ್ತರ ಕರ್ನಾಟಕದ ಕೈಗಾರಿಕಾ ಬೆಳವಣಿಗೆಗೆ ಮಹತ್ವದ ಹೆಜ್ಜೆಯಾಗಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ₹1,600 ಕೋಟಿಗೂ ಅಧಿಕ ಹೂಡಿಕೆಯ ಬೃಹತ್ ರಿಲಯನ್ಸ್ ಕೈಗಾರಿಕಾ ಘಟಕ ಸ್ಥಾಪನೆಯಾಗುತ್ತಿದೆ. ಈ ಯೋಜನೆಯಿಂದ ಜಿಲ್ಲೆಯಲ್ಲಿ 10ರಿಂದ 12 ಸಾವಿರ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ನ ಬೃಹತ್ ಕೈಗಾರಿಕಾ ಘಟಕ ಸ್ಥಾಪನೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕೈಗಾರಿಕೆಗಳು ಕೇವಲ ಬೆಂಗಳೂರು ಸುತ್ತಮುತ್ತ ಸೀಮಿತವಾಗದೆ ಉತ್ತರ ಕರ್ನಾಟಕದ ವಿಜಯಪುರದಂತಹ ಜಿಲ್ಲೆಗಳಲ್ಲಿಯೂ ಬೆಳೆಯಬೇಕು. ಸ್ಥಳೀಯ ಯುವಕರು ಉದ್ಯೋಗಕ್ಕಾಗಿ ಬೇರೆ ಜಿಲ್ಲೆಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ಜಿಲ್ಲೆಯಲ್ಲಿಯೇ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಸರ್ಕಾರದ ಉದ್ದೇಶವಾಗಿದೆ. ವಿಶೇಷವಾಗಿ ಕೈಗಾರಿಕಾ ಯೋಜನೆಗಳಿಗಾಗಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಲಾಗುವುದು ಎಂದರು.

Reliance Plant: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಆದ್ಯತೆ
ಕೈಗಾರಿಕಾ ಯೋಜನೆಗಳಿಗಾಗಿ ಭೂಮಿ ನೀಡಿದ ರೈತರು ಹಾಗೂ ಸಂತ್ರಸ್ತ ಕುಟುಂಬಗಳಿಗೆ ಉದ್ಯೋಗಾವಕಾಶಗಳಲ್ಲಿ ಪ್ರಥಮ ಆದ್ಯತೆ ನೀಡಬೇಕು. ಸ್ಥಳೀಯ ನಿವಾಸಿಗಳಿಗೆ ಕಾಯಂ ಹುದ್ದೆಗಳಲ್ಲಿ ಹೆಚ್ಚಿನ ಪ್ರಾಶಸ್ತ್ಯ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಭೂಸ್ವಾಧೀನಕ್ಕೆ ಸಂಬಂಧಿಸಿದ ರೈತರ ಬಾಕಿ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿ, ಅರ್ಹರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ರಿಲಯನ್ಸ್ ಗ್ರೂಪ್ ಸುಮಾರು ₹1,600 ಕೋಟಿಗೂ ಅಧಿಕ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಈ ಘಟಕದಿಂದ ನೇರ ಉದ್ಯೋಗಗಳ ಜತೆಗೆ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೂ ವೇಗ ಸಿಗಲಿದೆ. ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಿಂದೆ ಹಲವು ಅಡೆತಡೆಗಳಿದ್ದವು. ಇದೀಗ ಹೂಡಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಹಲವು ಪ್ರತಿಷ್ಠಿತ ಕಂಪನಿಗಳು ಜಿಲ್ಲೆಯಲ್ಲಿ ಘಟಕ ಸ್ಥಾಪಿಸಲು ಮುಂದೆ ಬಂದಿವೆ ಎಂದರು.
ವಿಜಯಪುರದಲ್ಲಿ ಹಲವು ಕಂಪನಿಗಳಿಂದ ಹೂಡಿಕೆಗೆ ಆಸಕ್ತಿ
ಟೆರಾ ಸರ್ಕ್ಯೂಟ್ಸ್, ಜನಿತ್ ಎನರ್ಜಿ ಸೊಲ್ಯೂಷನ್ಸ್ನ ವಿಂಡ್ಮಿಲ್ ಟವರ್ ತಯಾರಿಕಾ ಘಟಕಕ್ಕೆ 20 ಎಕರೆ ಭೂಮಿ ನೀಡಲಾಗಿದೆ. ಹೈಟೆಕ್ ಪೈಪ್ಸ್ ಸಂಸ್ಥೆಯೂ ಸುಮಾರು ₹250 ಕೋಟಿ ಹೂಡಿಕೆಯೊಂದಿಗೆ ಘಟಕ ಸ್ಥಾಪಿಸಲು ಮುಂದಾಗಿದೆ.
ಇದರ ಜತೆಗೆ ಮೇಟಾ ಗ್ರೂಪ್, ಯೂಲರ್ ಮೋಟಾರ್ಸ್, ಸುಜ್ಲಾನ್ ಎನರ್ಜಿ, ಎಜಾಕಿ, ವಿಂಗ್ಸ್ ವಿಟಾರಾ, ರೆಫೆಕ್ಸ್ ಇಂಡಸ್ಟ್ರೀಸ್, ಟೊಂಬೋ ಇಮೇಜಿಂಗ್, ಸರ್ವೋಟೆಕ್ ಪವರ್ ಸಿಸ್ಟಮ್ಸ್ ಹಾಗೂ ಹಿಂದೂಸ್ತಾನ್ ಕೋಕಾಕೋಲಾ ಸೇರಿದಂತೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಜಿಲ್ಲೆಯಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿವೆ.
ಇಟ್ಟಂಗಿಹಾಳದಲ್ಲಿ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ನ (ಕೆಎಸ್ಡಿಎಲ್) ಎರಡನೇ ಘಟಕ ಸ್ಥಾಪನೆಯಾಗುತ್ತಿದ್ದು, ಇದರಿಂದ ಸುಮಾರು 500 ಜನರಿಗೆ ಉದ್ಯೋಗ ದೊರೆಯಲಿದೆ. ಈ ಎಲ್ಲ ಯೋಜನೆಗಳ ಮೂಲಕ ವಿಜಯಪುರವನ್ನು ಪ್ರಮುಖ ಕೈಗಾರಿಕಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಆದ್ಯತೆ
ವಿಜಯಪುರ ಜಿಲ್ಲೆಯಲ್ಲಿ ದಾಳಿಂಬೆ, ನಿಂಬೆ, ದ್ರಾಕ್ಷಿ ಸೇರಿದಂತೆ ಹಲವು ಕೃಷಿ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸುವ ಉದ್ದೇಶದಿಂದ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕಂಪನಿಗಳನ್ನು ಆಹ್ವಾನಿಸಲಾಗುತ್ತಿದೆ.
ಮಹಾರಾಷ್ಟ್ರದ ಬಾರಾಮತಿ ಮಾದರಿಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ನೀರಾವರಿ, ಕೈಗಾರಿಕೆ, ಹೈನುಗಾರಿಕೆ ಹಾಗೂ ಆಹಾರ ಸಂಸ್ಕರಣಾ ಕ್ಷೇತ್ರಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸುವುದರ ಜತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ಒತ್ತು ನೀಡಲಾಗುತ್ತಿದೆ. ಕೃಷಿ ಮತ್ತು ಕೈಗಾರಿಕೆ ಎರಡೂ ಕ್ಷೇತ್ರಗಳು ಸಮಾನವಾಗಿ ಬೆಳೆದಾಗ ಮಾತ್ರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಮುಳವಾಡದಲ್ಲಿ ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: ಶಾಸಕ ಶಿವಾನಂದ ಪಾಟೀಲ
ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಬಸವನ ಬಾಗೇವಾಡಿ ತಾಲೂಕಿನ ಮುಳವಾಡದಲ್ಲಿ ರಿಲಯನ್ಸ್ನಂತಹ ಪ್ರತಿಷ್ಠಿತ ಸಂಸ್ಥೆಯ ಬೃಹತ್ ಕೈಗಾರಿಕಾ ಘಟಕ ಸ್ಥಾಪನೆಯಾಗುತ್ತಿರುವುದು ಈ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಐತಿಹಾಸಿಕ ಮೈಲಿಗಲ್ಲಾಗಿದೆ. ಹಿಂದೆ ಬಂಜರು ಭೂಮಿಯೆಂದು ಗುರುತಿಸಿಕೊಂಡಿದ್ದ ಪ್ರದೇಶದಲ್ಲಿ ಇಂದು ಕೈಗಾರಿಕಾ ಕ್ರಾಂತಿಯ ಕನಸು ಸಾಕಾರಗೊಳ್ಳುತ್ತಿದೆ ಎಂದರು.
ಕೈಗಾರಿಕಾ ಘಟಕ ಸ್ಥಾಪನೆಗಾಗಿ ಭೂಮಿ ನೀಡಿದ ರೈತರಿಗೆ ಹಾಗೂ ಯೋಜನೆ ಸಾಕಾರಗೊಳ್ಳಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸುವುದೇ ಕೈಗಾರಿಕೆಗಳ ಸ್ಥಾಪನೆಯ ಪ್ರಮುಖ ಉದ್ದೇಶವಾಗಬೇಕು. ವಿಶೇಷವಾಗಿ ಸ್ಥಳೀಯರಿಗೆ ಮೀಸಲಾದ ಉದ್ಯೋಗಾವಕಾಶಗಳಲ್ಲಿ ಜಿಲ್ಲೆಯ ಯುವಕರಿಗೆ ಆದ್ಯತೆ ನೀಡಬೇಕು ಎಂದು ಸಂಸ್ಥೆಯ ಆಡಳಿತ ಮಂಡಳಿಗೆ ಮನವಿ ಮಾಡಿದರು.
ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಹೆಚ್ಚಿನ ಕೃಷಿ ಭೂಮಿ ಮುಳುಗಡೆಯಾದ ಪ್ರದೇಶಗಳಲ್ಲಿ ಬಸವನ ಬಾಗೇವಾಡಿ ತಾಲೂಕು ಕೂಡ ಒಂದಾಗಿದೆ. ಹೀಗಾಗಿ ಈ ಭಾಗದ ರೈತರಿಗೆ ಕೈಗಾರಿಕಾ ಬೆಳವಣಿಗೆಯ ಮೂಲಕ ಉದ್ಯೋಗ ಹಾಗೂ ಆರ್ಥಿಕ ಭದ್ರತೆ ಕಲ್ಪಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ. ದ್ರಾಕ್ಷಿ, ನಿಂಬೆ, ದಾಳಿಂಬೆ ಸೇರಿದಂತೆ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ದೊಡ್ಡ ಮಟ್ಟದ ಮಾರುಕಟ್ಟೆ ಸೃಷ್ಟಿಯಾಗುವುದರೊಂದಿಗೆ ರೈತರ ಆದಾಯವೂ ಹೆಚ್ಚಲಿದೆ. ಕೈಗಾರಿಕೆ ಮತ್ತು ಕೃಷಿ ಎರಡೂ ಕ್ಷೇತ್ರಗಳು ಪರಸ್ಪರ ಪೂರಕವಾಗಿ ಬೆಳೆದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠಲ ಕಟಕಧೋಂಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಮಾಜಿ ಶಾಸಕ ರಾಜು ಆಲಗೂರ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ರಿಲಯನ್ಸ್ ಇಂಡಸ್ಟ್ರೀಸ್ನ ಪ್ರಮುಖರಾದ ಅರ್ಪಣ್ ಬಸು, ಕೇತನ್ ಮೋದಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಜುಫಿಶಾನ್ ಹಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ರೈತರು ಹಾಗೂ ಗಣ್ಯರು ಉಪಸ್ಥಿತರಿದ್ದರು.






